COSTALNEWS BIG BREAKING/ ಕುಂದಾಪುರ: ಅಮಾಸೆಬೈಲು ರೆಟ್ಟಾಡಿ ಸರಕಾರಿ ಜಾಗದಲ್ಲಿ ಅಕ್ರಮ ಕಟ್ಟಡ ನಿರ್ಮಾಣಕ್ಕೆ ಯತ್ನ?ದೂರು ಬೆನ್ನಲ್ಲೇ ಸ್ಥಳಕ್ಕೆ ಗ್ರಾಮ ಆಡಳಿತಾಧಿಕಾರಿ ಚಂದ್ರ ಶೇಖರ್ ಭೇಟಿ..!
Saturday, September 19, 2026
ರೆಟ್ಟಾಡಿ ಗ್ರಾಮದ ಸರ್ವೆ ನಂಬರ್ 124 ರ ಸರಕಾರಿ ಕುಮ್ಕಿ ಜಾಗದಲ್ಲಿ ತಿಮ್ಮಪ್ಪ ಪೂಜಾರಿ ಎಂಬವರು ಕಟ್ಟಡ ನಿರ್ಮಾಣ ಮಾಡುತ್ತಿದ್ದು, ಅದನ್ನು ಉತ್ತರ ಪ್ರದೇಶದ ಕುಟುಂಬವೊಂದಕ್ಕೆ ಬಾಡಿಗೆ ನೀಡುವ ಉದ್ದೇಶ ಹೊಂದಿದ್ದಾರೆ ಎಂದು ಅವರ ಸಂಬಂಧಿ ನಾಗರಾಜ್ ಪೂಜಾರಿ ಅವರು ಗ್ರಾಮ ಪಂಚಾಯಿತಿಗೆ ದೂರು ನೀಡಿದ್ದಾರೆ.
ದೂರು ಬಂದ ಬೆನ್ನಲ್ಲೇ ಗ್ರಾಮ ಆಡಳಿತಾಧಿಕಾರಿ ಚಂದ್ರಶೇಖರ್ ಅವರು ಸ್ಥಳಕ್ಕೆ ಭೇಟಿ ನೀಡಿ, ಸ್ಥಳ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ.
ಈ ವೇಳೆ ಕಟ್ಟಡ ನಿರ್ಮಾಣಕ್ಕೆ ಸಂಬಂಧಿಸಿದ ದಾಖಲೆ ಪತ್ರಗಳನ್ನು ತಕ್ಷಣ ಕಚೇರಿಗೆ ಹಾಜರುಪಡಿಸುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿದುಬಂದಿದೆ.
ಅಷ್ಟೇ ಅಲ್ಲದೆ, ಜಾಗದ ದಾಖಲೆಗಳ ಪರಿಶೀಲನೆ ಪೂರ್ಣಗೊಳ್ಳುವವರೆಗೆ ಕಟ್ಟಡ ನಿರ್ಮಾಣವನ್ನು ಸ್ಥಗಿತಗೊಳಿಸುವಂತೆ ಸೂಚನೆ ನೀಡಲಾಗಿದ್ದು, ನಿಯಮ ಉಲ್ಲಂಘನೆ ಕಂಡುಬಂದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ ಎನ್ನಲಾಗಿದೆ.
ಮತ್ತೊಂದೆಡೆ, ತಿಮ್ಮಪ್ಪ ಪೂಜಾರಿ ಅವರ ಕುಟುಂಬದ ಮೂಲ ಜಾಗಕ್ಕೆ ಸಂಬಂಧಿಸಿದ ವಿಚಾರ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿದೆ ಎನ್ನಲಾಗುತ್ತಿದ್ದು, ಇದೇ ಸಂದರ್ಭದಲ್ಲಿ ಸರಕಾರಿ ಕುಮ್ಕಿ ಜಮೀನಿನಲ್ಲಿ ಕಟ್ಟಡ ನಿರ್ಮಾಣಕ್ಕೆ ಮುಂದಾಗಿರುವ ಆರೋಪ ಇದೀಗ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಹಾಗೂ ಸ್ಥಳೀಯ ಆಡಳಿತ ಕಚೇರಿಯಿಂದ ಯಾವುದೇ ಕಟ್ಟಡದ ಪರವಾನಿಗೆ ಪಡೆಯದೆ, ಹಾಗೂ ಅಧಿಕಾರಿಗಳಿಗೆ ಕ್ಯಾರೇ ಮಾಡದೆ ಸರಕಾರಿ ಜಾಗದಲ್ಲಿ ಅಕ್ರಮ ಕಟ್ಟಡ ನಿರ್ಮಾಣ ಮಾಡಲು ಮುಂದಾಗಿದ್ದಂತೂ ಸತ್ಯ..?
ದೂರು ಬಂದ ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ದಾಖಲೆಗಳನ್ನು ಹಾಜರುಪಡಿಸುವಂತೆ ಸೂಚಿಸಿರುವ ಗ್ರಾಮ ಆಡಳಿತಾಧಿಕಾರಿ ಚಂದ್ರಶೇಖರ್ ಅವರ ಕ್ರಮಕ್ಕೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗುತ್ತಿದೆ.